Belagavi News :
ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಜಲಾಶಯಗಳ ನೀರಿನ ಸಂಗ್ರಹ ಕುಸಿದಿದ್ದು, ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಡುವೆ ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿರುವುದು ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಬರ ಪರಿಸ್ಥಿತಿಯ ನಡುವೆಯೇ ತಮಿಳುನಾಡಿಗೆ ನೀರು ಹರಿಸುವ ಆದೇಶ ನೀಡಿರುವುದಕ್ಕೆ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ವಲಯಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದಲ್ಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವಾಗ ಹೊರ ರಾಜ್ಯಕ್ಕೆ ನೀರು ಬಿಡುವುದು ಸೂಕ್ತವಲ್ಲ ಎಂದು ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ನಿರೀಕ್ಷಿತ ಮಳೆ ಯಾಗದ ಕಾರಣ ಕೃಷಿ ಹಾಗೂ ಕುಡಿಯುವ ನೀರಿನ ಮೇಲೆ ಪರಿಣಾಮ ಬೀರಿದೆ. ಜಲಾಶಯಗಳಲ್ಲಿನ ನೀರಿನ ಮಟ್ಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ಮರು ಪರಿಶೀಲಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.
ಇದೇ ವೇಳೆ ರಾಜ್ಯ ಸರ್ಕಾರವು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ಎರಡು ರಾಜ್ಯಗಳ ನಡುವಿನ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ.
CWRC ಆದೇಶದ ವಿರುದ್ಧ ಮೇಲ್ಮನವಿ - ಸುಪ್ರೀಂ ಕೋರ್ಟ್ , CWMA ಮೊರೆ ಹೋಗಲು ಕರ್ನಾಟಕ ಸರ್ಕಾರ ನಿರ್ಧಾರ :
ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ , ಜಲ ಸಂಪನ್ಮೂಲ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, CWRC ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ಮುಂದೆ ಮೇಲ್ಮನವಿ ಸಲ್ಲಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಕಾನೂನು ತಜ್ಞರು ಅಗತ್ಯ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಮಳೆ ಕೊರತೆ ಹಾಗೂ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ CWRC ಆದೇಶಕ್ಕೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿತ್ತು. ಇದೀಗ ಸರ್ಕಾರ ಕಾನೂನು ಮಾರ್ಗದ ಮೂಲಕ ಆದೇಶ ಪ್ರಶ್ನಿಸಲು ಮುಂದಾಗಿದೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕಾವೇರಿ ನೀರು ವಿವಾದ - CWRC ಆದೇಶದ ವಿರುದ್ಧ ಮೇಲ್ಮನವಿ ; ತಮಿಳುನಾಡು ಸಿಎಂ ಗೆ ಕರ್ನಾಟಕಕ್ಕೆ ಬರಲು ಆಹ್ವಾನ ನೀಡಿದ ಡಿಕೆ ಶಿವಕುಮಾರ್ :
ಕರ್ನಾಟಕದಲ್ಲಿ ಈ ಬಾರಿ ವರುಣನ ಕೃಪೆ ಸಿಗದ ಹಿನ್ನೆಲೆಯಲ್ಲಿ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟೆ ಎದುರಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ಮನವಿಯನ್ನು ಈ ಹಿಂದೆ ಎರಡು ಬಾರಿ ತಿರಸ್ಕರಿಸಲಾಗಿತ್ತು. ಆದರೆ ಈ ಬಾರಿ ಕಾವೇರಿ ನೀರು ನಿಯಂತ್ರಣ ಸಮಿತಿ ನೀರು ಹರಿಸುವಂತೆ ಆದೇಶ ನೀಡಿದೆ ಎಂದು ಅವರು ತಿಳಿಸಿದ್ದಾರೆ.
CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟವಾಗಿ ತಿಳಿಸಿದ್ದಾರೆ. ಟೀ ಕುರಿತು ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.
ತಮಿಳುನಾಡು ಮುಖ್ಯಮಂತ್ರಿ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವುದಾಗಿ ತಿಳಿಸಿದ ಡಿಕೆ ಶಿವಕುಮಾರ್, ಅವರನ್ನು ಗೌರವದಿಂದ ಕರ್ನಾಟಕಕ್ಕೆ ಬರುವಂತೆ ಆಹ್ವಾನಿಸಿದ್ದೇವೆ ಎಂದರು. ರಾಜ್ಯದ ಜಲ ಪ್ರದೇಶಗಳ ವಾಸ್ತವ ಸ್ಥಿತಿ ವೀಕ್ಷಿಸಲು ಮನವಿ ಮಾಡಿದ್ದು, ಅಗತ್ಯವಿದ್ದರೆ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡುವ ಭರವಸೆಯನ್ನು ನೀಡಿದ್ದೇವೆ ಎಂದು ಹೇಳಿದ್ದಾರೆ.
ಕಾವೇರಿ ವಿಚಾರವನ್ನು ಸೌಹಾರ್ದಯುತವಾಗಿ ಚರ್ಚೆ ಮೂಲಕ ಬಗೆಹರಿಸಿಕೊಳ್ಳಬೇಕಿದೆ. ತಮಿಳುನಾಡು ಮುಖ್ಯಮಂತ್ರಿಗಳ ಉದ್ದೇಶ ಏನೆಂಬುದು ಗೊತ್ತಿಲ್ಲ, ಆದರೆ ಅವರು ಬರಲು ಒಪ್ಪಿದರೆ ಗೌರವದಿಂದ ಬರ ಮಾಡಿಕೊಳ್ಳುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.