Belagavi News:
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಿಯೋಗವು ಇಂದು ಬೆಂಗಳೂರಿನ ಕೆಪಿಎಸ್ ಸಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಸೇರಿದಂತೆ ಬಿಜೆಪಿ ನಾಯಕರ ನಿಯೋಗವು ಕೆಪಿಎಸ್ ಸಿ ಹಂಗಾಮಿ ಅಧ್ಯಕ್ಷ ಡಾ. ಬಿ. ಪ್ರಭುದೇವ್ ಅವರನ್ನು ಭೇಟಿ ಮಾಡಿತು.
ಈ ವೇಳೆ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿವರವಾದ ಚರ್ಚೆ ನಡೆಸಿದ ನಿಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿತು.
ಇತ್ತೀಚಿಗೆ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ನಿಯೋಗದ ಕೆಪಿಎಸ್ ಸಿ ಭೇಟಿ ಮಹತ್ವ ಪಡೆದಿದೆ. ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆ ಹಾಗೂ ಆರೋಪಗಳ ಕುರಿತು ಸ್ಪಷ್ಟನೆ ಪಡೆಯಲು ಬಿಜೆಪಿ ನಾಯಕರು ಮುಂದಾದರು.